ಕನ್ನಡ ಮನಸ್ಸುಗಳನ್ನು ಕಟ್ಟುವ ಕೆಲಸ ಆಗಬೇಕು: ಶಿವಾನಂದ ತಗಡೂರು

ಬೆಂಗಳೂರು: ಕರ್ನಾಟಕ ಎಲ್ಲ ಭಾಷಿಕರಿಗೂ ನೆಲೆಯಾಗಿದೆ. ಇಲ್ಲಿ ನೆಲೆಸಿರುವ ಎಲ್ಲ ಭಾಷಿಕರನ್ನೂ ಗೌರವಿಸುವುದರ ಜತೆಗೆ ಅವರಲ್ಲಿ ಕನ್ನಡದ ಮೇಲಿನ ಅಭಿಮಾನ ಮತ್ತು ಕನ್ನಡ ಮನಸ್ಸುಗಳನ್ನು ಕಟ್ಟುವ ಕೆಲಸ ತುರ್ತಾಗಿ ಆಗಬೇಕಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಬೆಂಗಳೂರಿನಲ್ಲಿ ಟಿವಿಎಸ್ ಎಮರಾಲ್ಡ್ ಜಾರ್ಡಿನ್ ಓನರ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ಅನ್ಯಭಾಷಿಕರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಕನ್ನಡ ಭಾಷೆ, ಸಂಸ್ಕೃತಿ ಮತ್ತು ನೆಲದ ಅಸ್ಮಿತೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಸಂಘಟಿತವಾಗಿ ನಡೆಯಬೇಕು. ಕನ್ನಡಿಗರಲ್ಲದೆ, ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡವನ್ನು ಪ್ರೀತಿಸುವ ಮತ್ತು ಗೌರವಿಸುವ ವಾತಾವರಣ ನಿರ್ಮಾಣವಾಗಬೇಕು ಎಂದರು.

ಅಪಾರ್ಟ್‌ಮೆಂಟ್‌ಗಳಲ್ಲಿಯೂ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಸುಗೆಯನ್ನು ಬಲಪಡಿಸುವುದರ ಜತೆಗೆ ಕನ್ನಡ ಮನಸ್ಸುಗಳನ್ನು ಬೆಸೆಯುವ ವೇದಿಕೆಗಳಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ನವೀನ್ ಗೌಡ ಹಾಗೂ ಟಿವಿಎಸ್ ಎಮರಾಲ್ಡ್ ಜಾರ್ಡಿನ್ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ಮಧು ಎಂ.ಎಲ್. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *