ಬಳ್ಳಾರಿಯಿಂದ ಹೊಸಪೇಟೆಗೆ ಸಾಗಿಸುತ್ತಿದ್ದ  ₹2.73 ಲಕ್ಷ ಮೌಲ್ಯದ 119.4 ಕ್ವಿಂಟಾಲ್ ಪಡಿತರ ಅಕ್ಕಿ ವಶ: ಐವರ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ, ನ. 10: ಸರ್ಕಾರದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ವಿತರಿಸಲಾಗಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು, ₹2,73,792 ಮೌಲ್ಯದ 119.4 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ನ. 7ರಂದು ಬಳ್ಳಾರಿಯಿಂದ ಹೊಸಪೇಟೆ ಕಡೆಗೆ ಕುಡಿತಿನಿ ಮಾರ್ಗವಾಗಿ MH-16-CD-5388 ನೋಂದಣಿ ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಲಾರಿಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಅಹಿಲ್ಯಾನಗರದ ರವಿರಾಜ್ ಗೌತಮ್ ಜಾಧವ್, ಬಳ್ಳಾರಿಯ ಅಭಿಲಾಷ್ ಮತ್ತು ಧನಂಜಯ, ಮಹಾರಾಷ್ಟ್ರದ ಸೊಲ್ಲಾಪುರದ ಸೂರಜ್ ಇಂಗ್ಲೆ ಹಾಗೂ ಲಾರಿಯ ಮಾಲೀಕ ಅಶುತೋಷ್ ಪ್ರಕಾಶ್ ದೇವರ ಮನೆ ಸೇರಿದಂತೆ ಐವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತು ಕುಡಿತಿನಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 157/2026ರ ಅಡಿಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955ರ ಕಲಂ 3, 6(ಎ), 7 ಹಾಗೂ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ ಆದೇಶದ ಕಲಂ 3, 4, 12, 18, 19 ಮತ್ತು ಕರ್ನಾಟಕ ಅಗತ್ಯ ವಸ್ತುಗಳ ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಸರ್ಕಾರದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ವಿತರಿಸಲಾದ ಪಡಿತರ ಅಕ್ಕಿಯನ್ನು ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಬೇರೆಡೆಗೆ ಸಾಗಿಸಲಾಗುತ್ತಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪ್ರಸಾದ್ ಗೋಖಲೆ, ಸಿಪಿಐ ಬಾಳನಗೌಡ, ಪಿಎಸ್ಐ ಮುದ್ದುರಂಗಸ್ವಾಮಿ, ಪಿಎಸ್ಐ ವಾಣಿ, ಎಎಸ್ಐ ಕುಬೇರ ನಾಯಕ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಆಹಾರ ಇಲಾಖೆ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.

ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಅವರು ಶ್ಲಾಘಿಸಿದ್ದಾರೆ.

Leave a Reply

Your email address will not be published. Required fields are marked *