ನೂತನ ಆಡಳಿತ ಮಂಡಳಿಗೆ ಒಂದು ವರ್ಷದ ಸಂಭ್ರಮ: ನ.19ರಂದು KUWJ ವೆಬ್‌ಸೈಟ್ ಅನಾವರಣ

ಸಚಿವ ಅಜೇಯ್ ಸಿಂಗ್ ಅವರಿಂದ ನವೀಕೃತ ವೆಬ್‌ಸೈಟ್ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ನೂತನವಾಗಿ ಚುನಾಯಿತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ನ. 19ರಂದು ಬೆಂಗಳೂರಿನ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಂಘದ ನವೀಕೃತ ವೆಬ್‌ಸೈಟ್ ಅನ್ನು ಸಣ್ಣ ನೀರಾವರಿ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಅಜೇಯ್ ಸಿಂಗ್ ಅವರು ಅನಾವರಣಗೊಳಿಸಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಜರಾಯಿ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಬಸವಂತಪ್ಪ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳಾದ ಪಿ. ತ್ಯಾಗರಾಜ್ ಮತ್ತು ಜಯಪ್ರಕಾಶ್ ರಾಮಯ್ಯ ಭಾಗವಹಿಸಲಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಮಂಜುನಾಥ್.ಜೆ ಅವರು ಉಪಸ್ಥಿತರಿರಲಿದ್ದಾರೆ.

ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಎಚ್.ಬಿ. ದಿನೇಶ್ ಅವರು ಕೆಯುಡಬ್ಲ್ಯೂಜೆ ದತ್ತಿನಿಧಿಗೆ ಚೆಕ್ ಹಸ್ತಾಂತರಿಸಲಿದ್ದಾರೆ. ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಅನಂತ ಚಿನಿವಾರ ಅವರಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ನ. 19ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಕಂದಾಯ ಭವನದ ಮೂರನೇ ಮಹಡಿಯಲ್ಲಿರುವ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪತ್ರಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿಜಿ.ಸಿ.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *