ಮನೆ ಮನೆ ಸಮೀಕ್ಷೆಯ ಸ್ಥಿತಿ ಗತಿ ಕುರಿತು ಅಧಿಕಾರಿಗಳ ಜತೆ ಸಿಎಂ ವಿಡಿಯೊ ಕಾನ್ಷರೆನ್ಸ್: ಅ. 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ -ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು, ಅ.7:  ಸೆ. 2 ರಿಂದ ಆರಂಭವಾಗಿರುವ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಹಿನ್ನಲೆಯಲ್ಲಿ ಅ. 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.                           ಮನೆ ಮನೆ ಸಮೀಕ್ಷೆಯ ಸ್ಥಿತಿ ಗತಿ ಕುರಿತು ಅಧಿಕಾರಿಗಳ ಜತೆ ವಿಡಿಯೊ ಕಾನ್ಷರೆನ್ಸ್ ಬಳಿಕ ಈ ಮಾಹಿತಿಯನ್ನು ಪ್ರಕಟಿಸಿದರು.

ಸಮೀಕ್ಷೆ ಅ.7ರಂದು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅ.8ರಿಂದ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ ಎಂದರು.

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದರು.

ಸಮೀಕ್ಷೆ ನಡೆಯುವಾಗ ‌ಮೃತಪಟ್ಟ ಮೂವರು ಶಿಕ್ಷಕರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಪ್ರಕಟಿಸಿದರು.

ಮನೆ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲುಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ.
ಜಿಬಿಎ ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ ಜಿಬಿಎ ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ಹೇಳಿದರು.

Leave a Reply

Your email address will not be published. Required fields are marked *