ಬಳ್ಳಾರಿ, ಜು. 29: ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಬುಧವಾರ ರಾತ್ರಿ ನಗರದ ಗಡಿಗೆ ಚೆನ್ನಪ್ಪ ವೃತ್ತ (ರಾಯಲ್ ಸರ್ಕಲ್) ಬಳಿ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸಲಾಯಿತು.
ಕರವೇ ಜಿಲ್ಲಾ ಅಧ್ಯಕ್ಷ ವಿ.ಹೆಚ್. ಹುಲುಗಪ್ಪ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಅದ್ದಿಗೇರಿ ರಾಮಣ್ಣ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕನ್ನಡಪರ ಹೋರಾಟಗಾರರು ಭಾಗವಹಿಸಿ ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರು ಬಿಡುಗಡೆ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಬಳಿಕ ಪಟಾಕಿ ಸಿಡಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ರಾಜ್ಯದಲ್ಲಿ ಈ ವೇಳೆಗೆ ಶೇ.70ರಷ್ಟು ಮಳೆಯಾಗಬೇಕಿದ್ದರೂ ಕೇವಲ ಶೇ.20ರಷ್ಟು ಮಾತ್ರ ಮಳೆಯಾಗಿದ್ದು, ತೀವ್ರ ಮಳೆ ಕೊರತೆಯಿಂದ ಕಾವೇರಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ ಎಂದು ತಿಳಿಸಿದರು. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದರು.
ರಾಜ್ಯದ ರೈತರ ಹಿತಾಸಕ್ತಿ, ಕುಡಿಯುವ ನೀರಿನ ಅಗತ್ಯ ಹಾಗೂ ಜನರ ಬದುಕಿಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯದ ಅವಶ್ಯಕತೆಗಳನ್ನು ಪೂರೈಸಿದ ಬಳಿಕವೇ ಇತರ ರಾಜ್ಯಗಳಿಗೆ ನೀರು ಹರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕರವೇ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅವರ ನಿರ್ದೇಶನದಂತೆ, ಕಾವೇರಿ ನೀರು ಬಿಡುಗಡೆ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಜು. 30ರಂದು ಬೆಳಿಗ್ಗೆ 7.30ರಿಂದ 7.45ರವರೆಗೆ ರಾಜ್ಯಾದ್ಯಂತ 15 ನಿಮಿಷಗಳ ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ಮರುಪರಿಶೀಲಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ, ತಾಲ್ಲೂಕು ಹಾಗೂ ನಗರ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಕನ್ನಡಾಭಿಮಾನಿಗಳು ಇದ್ದರು.
