ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್:  ಕೆಯುಡಬ್ಲ್ಯೂಜೆ ಒತ್ತಾಯಕ್ಕೆ ಸರ್ಕಾರದ ಸ್ಪಂದನೆ

ಬೆಂಗಳೂರು, ಆ. 4: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ಉಚಿತ ಬಸ್ ಪಾಸ್ ಕಮಿಟಿಯ ಸಭೆಯನ್ನು ಆ. 6ರಂದು ನಡೆಸಲು ಸರ್ಕಾರ ನಿರ್ಧರಿಸಿದೆ.

  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕು ಹಾಗೂ ಬಸ್ ಪಾಸ್ ಕಮಿಟಿಯ ಸಭೆಯನ್ನು ತಕ್ಷಣ ಕರೆಯಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಜು. 30ರಂದು ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದರು. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಆ. 6ರಂದು ಕಮಿಟಿ ಸಭೆ ನಡೆಸಲು ತೀರ್ಮಾನಿಸಿರುವುದು ಗ್ರಾಮೀಣ ಪತ್ರಕರ್ತರಿಗೆ ಆಶಾದಾಯಕ ಬೆಳವಣಿಗೆಯಾಗಿದೆ.

ಶಿವಾನಂದ ತಗಡೂರು

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಮಿಟಿ ಸಭೆಯಲ್ಲಿ ಅಗತ್ಯ ನಿರ್ಧಾರಗಳನ್ನು ಕೈಗೊಂಡು, ಅರ್ಹ ಪತ್ರಕರ್ತರಿಗೆ ಯಾವುದೇ ವಿಳಂಬವಿಲ್ಲದೆ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪತ್ರಕರ್ತರ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಸ್ಪಂದಿಸಿರುವುದನ್ನು ಸ್ವಾಗತಿಸಿರುವ ಕೆಯುಡಬ್ಲ್ಯೂಜೆ, ಗ್ರಾಮೀಣ ಪತ್ರಕರ್ತರ ಬಹುದಿನಗಳ ಕನಸಾಗಿರುವ ಈ ಯೋಜನೆ ಶೀಘ್ರದಲ್ಲೇ ಸಂಪೂರ್ಣವಾಗಿ ಜಾರಿಯಾಗಲಿದೆ ಎಂಬ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *