
ದಾವಣಗೆರೆ, ಸೆ.21: ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಮತ್ತಷ್ಟು ಆತ್ಮವಿಶ್ವಾಸ ತುಂಬುತ್ತವೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೇಳಿದರು.
ದಾವಣಗೆರೆ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ನಗರದ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಿದ್ದ 2025-26ನೇ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಅವರ ಮುಂದಿನ ಶೈಕ್ಷಣಿಕ ಪಯಣಕ್ಕೆ ಮತ್ತಷ್ಟು ಆತ್ಮವಿಶ್ವಾಸ ತುಂಬುತ್ತವೆ ಎಂದು ತಿಳಿಸಿದರು. ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಡಿಸಿಎಂ ಅವರು ಶಿಕ್ಷಣದ ಮೂಲಕ ಸಮಾಜದ ಪ್ರಗತಿಗೆ ಕೊಡುಗೆ ನೀಡುವ ಪ್ರತಿಭಾವಂತ ಯುವಜನತೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಮಹಾಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ಸಚಿವರಾದ ಕೆ.ಎಸ್.ಬಸವಂತಪ್ಪ, ಮಾಜಿ ಸಚಿವರು ಹಾಗೂ ಶಾಸಕರಾದ ಡಾ. ಹೆಚ್.ಸಿ.ಮಹದೇವಪ್ಪ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಪ್ರಸಾದ್ ಅಬ್ಬಯ್ಯ, ಬಿ.ಪಿ.ಹರೀಶ್, ಸಮರ್ಥ ಶಾಮನೂರು, ವಿಧಾನ ಪರಿಷತ್ ಸದಸ್ಯರಾದ ಎಫ್.ಹೆಚ್.ಜಕ್ಕಪ್ಪನವರ್, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿ.ನರೇಂದ್ರ, ದಾವಣಗೆರೆ ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷರಾದ ಎನ್.ರುದ್ರಮುನಿ, ನವೀನ್ ಕುಮಾರ್ ಮತ್ತಿತರರು ಇದ್ದರು.
