ಶಿವಾನಂದ ತಗಡೂರು ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು, ಹಿರಿಯ ಪತ್ರಕರ್ತರು ಹಾಗೂ ರಂಗಕರ್ಮಿ ಶಿವಾನಂದ ತಗಡೂರು ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಅವರು ಪ್ರದಾನ ಮಾಡಿದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ  ಬುಧವಾರ ನಡೆದ ಸಮಾರಂಭದಲ್ಲಿ  ಅವರು  ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ  ಉಮಾಶ್ರೀ, “ರಂಗಭೂಮಿ ಯಾವ ಕಾಲಕ್ಕೂ ತನ್ನ ಜೀವಂತಿಕೆಯನ್ನು ಕಳೆದುಕೊಳ್ಳುವುದಿಲ್ಲ. ನಾನೂ ಕೂಡ ರಂಗಭೂಮಿ ಕಲಾವಿದೆಯಾಗಿ ಬೆಳೆದು ಈ ಎತ್ತರದ ಸ್ಥಾನಕ್ಕೆ ಬಂದಿದ್ದೇನೆ. ರಂಗಭೂಮಿಯ ಮೂಲಕ ಬೆಳೆದು ಬಂದಿರುವ ಎಲ್ಲ ಕಲಾವಿದರಿಗೂ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆಗಳು” ಎಂದು ಹೇಳಿದರು.

ಸಮಾರಂಭದಲ್ಲಿ ಹಿರಿಯ ನಟ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ. ನಾಗರಾಜಮೂರ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್, ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ವಸುಂಧರಾ ಹಾಗೂ ರಿಜಿಸ್ಟ್ರಾರ್ ನೀಲಮ್ಮ, ಅಕಾಡೆಮಿ ಮಾಜಿ ಅಧ್ಯಕ್ಷ ಶೇಖ್ ಮಾಸ್ತರ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳು ಹಾಗೂ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

Leave a Reply

Your email address will not be published. Required fields are marked *