ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚುವರಿ ಪ್ರಮಾಣವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಡಿಎಸ್ ಎಸ್ ಜಿಲ್ಲಾಧ್ಯಕ್ಷ ಸುರೇಶ್ ಒತ್ತಾಯ

ಬಳ್ಳಾರಿ, ನ. 2: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ಕಾನೂನುಬದ್ಧ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ, ಹೆಚ್ಚುವರಿ ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ (ಶೆಡ್ಯೂಲ್ 9) ಸೇರಿಸಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಳ್ಳಾರಿ ಜಿಲ್ಲಾಧ್ಯಕ್ಷ ಸುರೇಶ್ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸುವ ಮೂಲಕ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಏರಿಸಿತ್ತು. ಈ ನಿರ್ಧಾರದಿಂದ ಎಸ್‌ಸಿ, ಎಸ್‌ಟಿ ಸಮುದಾಯಗಳ ಶೈಕ್ಷಣಿಕ ಹಾಗೂ ಔದ್ಯೋಗಿಕ ಪ್ರಗತಿಗೆ ಹೆಚ್ಚಿನ ಅವಕಾಶ ದೊರೆಯುವ ನಿರೀಕ್ಷೆಯಿತ್ತು ಎಂದು ತಿಳಿಸಿದರು.

ಆದರೆ, ಶೇ.50ರ ಮಿತಿಯನ್ನು ಮೀರಿ ಶೇ.56ಕ್ಕೆ ಹೆಚ್ಚಿಸಲಾದ ಮೀಸಲಾತಿ ನ್ಯಾಯಾಲಯದ ಕಾನೂನು ಪರಿಶೀಲನೆಗೆ ಒಳಗಾಗಿ, ಹೈಕೋರ್ಟ್‌ನಿಂದ ರದ್ದುಗೊಂಡಿದೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಅನ್ಯಾಯವಾಗುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಮೀಸಲಾತಿ ಹೆಚ್ಚಳದ ನಿರ್ಧಾರಕ್ಕೆ ಕಾನೂನುಬದ್ಧ ರಕ್ಷಣೆ ದೊರೆಯಬೇಕಾದರೆ ಅದನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವುದು ಅಗತ್ಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಸೂಕ್ತ ಒತ್ತಡ ಹೇರಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಹಿತಾಸಕ್ತಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಬೇಕು. ಈ ವಿಚಾರದಲ್ಲಿ ಹಿಂದಿನ ಸರ್ಕಾರಗಳು ತೋರಿದ ನಿರ್ಲಕ್ಷ್ಯವನ್ನು ಬದಿಗಿಟ್ಟು, ಈಗಿನ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೂಪನಗುಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಲ್ಲಯ್ಯ, ಕೃಷ್ಣಮೂರ್ತಿ, ಕರ್ಚೇಡು ದೇವಕುಮಾರ್, ಎಚ್. ರಮೇಶ್, ಬಿ. ನರಸಿಂಹಲು, ಅಂಜಿನಪ್ಪ, ಅಶೋಕ್ ಸೇರಿದಂತೆ ಸಮಿತಿಯ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *