
ಬೆಂಗಳೂರು, ನ.6: ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಸಚಿವ, ಖ್ಯಾತ ವಿಮರ್ಶಕ, ಭಾಷಾತಜ್ಞ ಡಾ. ಕೆ.ವಿ.ನಾರಾಯಣ ಶುಕ್ರವಾರ ನಿಧನರಾದರು.
ಅವರಿಗೆ 78 ವರ್ಷವಾಗಿತ್ತು. ಗುರುವಾರ ತಡರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ ಪ್ರೊ. ಎಚ್.ಎಸ್. ಶ್ರೀಮತಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
ಮೈಸೂರಿನ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ 1948ರಲ್ಲಿ ಜನಿಸಿದ ನಾರಾಯಣ ಅವರು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಡಾ. ಜಿ.ಎಸ್. ಶಿವರುದ್ರಪ್ಪ ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದರು.
ಸಿಎಂ. ಕಂಬನಿ: ಖ್ಯಾತ ವಿಮರ್ಶಕ, ಭಾಷಾತಜ್ಞ ಹಾಗೂ ಹಿರಿಯ ಸಾಹಿತಿ ಕೆ.ವಿ. ನಾರಾಯಣ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.
ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕೆ.ವಿ. ನಾರಾಯಣ ಅವರು ಅಮೂಲ್ಯ ಕೊಡುಗೆಗಳನ್ನು ನೀಡಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿ, ಕುವೆಂಪು ಭಾಷಾ ಭಾರತಿ ಅಧ್ಯಕ್ಷರಾಗಿ ಸಲ್ಲಿಸಿದ ಅವರ ಸೇವೆ ಸದಾ ಸ್ಮರಣೀಯ. ಡಾ.ಕೆವಿನಾ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.
