18 ತಿಂಗಳಲ್ಲಿ 28 ಸಾವಿರ ಕೆರೆಗಳ ಜೀಣೋದ್ಧಾರ. -ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ಬಳ್ಳಾರಿ, ಸೆ. 12: ರಾಜ್ಯದಲ್ಲಿರುವ 28 ಸಾವಿರ ಕೆರೆಗಳನ್ನು ಮುಂದಿನ ಒಂದೂವರೆ ವರ್ಷದಲ್ಲಿ ಜೀರ್ಣೊದ್ಧಾರ ಮಾಡುವ ಗುರಿ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಜೀರ್ಣೋದ್ದಾರದ ಕಾರ್ಯ ಶುರುವಾಗಿದ್ದು, ಜಿಪಂ ವ್ಯಾಪ್ತಿಯ ಕೆರೆಗಳನ್ನು ಗ್ರಾಪಂಗೆ ವಹಿಸಲಾಗಿದೆ. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ, ಸಂಘ ಸಂಸ್ಥೆಗಳ ನೆರವಿನೊಂದಿಗೆ ಕೆರೆಗಳ ಜೀರ್ಣೋದ್ಧಾರ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ನರೇಗಾ ಯೋಜನೆಯಡಿಯಲ್ಲಿ ಸಣ್ಣ ರೈತರು ಕೂಲಿ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಮ್ಮ ಜಮೀನಿನ ವ್ಯಾಪ್ತಿಯಲ್ಲಿ ಬದು ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಮಳೆ ನೀರಿನ ಹರಿಯವಿಕೆ ತಡೆಯುತ್ತದೆ. ಕೆರೆ, ಕಲ್ಯಾಣಿ, ಗೋ ಕಟ್ಟೆಗಳ ನಿರ್ಮಿಸಲಾಗುತ್ತಿದೆ. ಹಳೆಯ ಕಾಲದ ಬಾವಿಗಳಿಗೆ ಹೊಸ ರೂಪ ನೀಡುವ ಮೂಲಕ ಅವುಗಳ ಜೀರ್ಣೋದ್ದಾರ ಮಾಡಲಾಗುತ್ತದೆ. ಇವತ್ತಿಗೂ ಜಾಬ್ ಕಾರ್ಡ್ ನೀಡಲಾಗುತ್ತಿದೆ. ಅವ್ಯವಹಾರ ತಡೆಯುವ ಉದ್ದೇಶದಿಂದ ಕೂಲಿ ಹಣವನ್ನು ನೇರವಾಗಿ ಕೆಲಸ ಮಾಡಿದವರ ಬ್ಯಾಂಕ್ ಖಾತೆಗಳಿಗೆ 15 ದಿನದೊಳಗೆ ಜಮೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
*ಮನೆ ಮನೆಗೆ ಗಂಗೆ: ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 2024 ರೊಳಗಾಗಿ ಮನೆ ಮನೆಗೆ ಗಂಗೆ ಎಂಬ ಧ್ಯೇಯದೊಂದಿಗೆ ಹಳ್ಳಿಗಳಲ್ಲಿ ಮನೆ ಮನೆಗೆ ಕುಡಿಯುವ ನೀರು ಒದಗಿಸಲಾಗುತ್ತದೆ. ಕೇಂದ್ರ ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆಯು ಈಗಾಗಲೇ ಕಾರ್ಯ ರೂಪಕ್ಕೆ ಬಂದಿದ್ದು, ಪ್ರತಿ ಮನೆಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತದೆ. ಇಡೀ ದೇಶದಲ್ಲಿ ಜೆಜೆಎಂ ಯೋಜನೆಯ ಕಾಮಗಾರಿಗಳು ವೇಗವಾಗಿ ಸಾಗುತ್ತಿವೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *